ನಗರದಲ್ಲಿ ಇಂದು ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳ ಬೃಹತ್ ಪ್ರತಿಭಟನೆ….
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ.
ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರೈತ ಸಂಘಟನೆಗಳ ವತಿಯಿಂದ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಹೃದಯ ಭಾಗಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರೇಸ್ ಕೋರ್ಸ್ ರಸ್ತೆ, ಕೆಜಿ ರಸ್ತೆ, ಕಾರ್ಪೋರೇಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.
ರೈತರ ಪ್ರತಿಭಟನೆ ಮತ್ತು ಜೆಡಿಎಸ್ ಪ್ರತಿಭಟನೆ ನಡೆಯಲಿರುವ ಹಿನ್ನಲೆಯಲ್ಲಿ ಭದ್ರತೆಗಾಗಿ ಸಿಆರ್ಪಿಎಫ್ ತುಕಡಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಪರಿಹಾರಕ್ಕೆ ಒತ್ತಾಯಿಸಿ ನೆರೆ ಸಂತ್ರಸ್ತ ರೈತರು ಮತ್ತು ಜೆಡಿಎಸ್ ವತಿಯಿಂದ ಬೃಹತ್ ಪ್ರತಿಭಟನೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ರ್ಯಾಲಿ ಸಾಗುವ ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಮೆರವಣಿಗೆ ಆರಂಭವಾದ ನಂತರ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗುವುದು ಎನ್ನಲಾಗಿದೆ.