ಶ್ರೀನಿವಾಸಗೌಡ – ಡಿಕೆಶಿ ಭೇಟಿ; ಜೆಡಿಎಸ್ ಶಾಸಕ ಕಾಂಗ್ರೆಸ್ ಸೇರುವ ಸಾಧ್ಯತೆ!
ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇತ್ತೀಚೆಗೆ ಮೈಸೂರಿನ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜೆ.ಟಿ. ದೇವೇಗೌಡ ಅವರು ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಮುಂದಿನ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಲಾಗಿದೆ.
ಈ ನಡುವೆ, ಶ್ರೀನಿವಾಸಗೌಡ ಅವರು ಎರಡು ದಿನಗಳ ಹಿಂದೆ ನಡೆದ ಜೆಡಿಎಸ್ ಶಾಸಕಾಂಗ ಸಭೆಗೆ ಗೈರಾಗಿದ್ದರು. ಇದೀಗ, ಅವರು ಡಿಕೆಶಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಅಭಿಪ್ರಾಯಗಳು ವ್ಯಕ್ತವಾಗಿವೆ.
ಕೆ. ಸಿ. ವ್ಯಾಲಿ ಯೋಜನೆ ವಿಚಾರದಲ್ಲಿ ಶ್ರೀನಿವಾಸ ಗೌಡ ಅವರು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಮೂಲಕ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎನ್ನಲಾಗಿದೆ.
ಶಾಸಕ ಕೆ. ಶ್ರೀನಿವಾಸ ಗೌಡ ಈಗಾಗಲೇ ಜೆಡಿಎಸ್ ತೊರೆಯಲು ಚಿಂತನೆ ನಡೆಸಿದ್ದಾರೆ. ಈ ಕುರಿತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದೂ ಕೂಡ ಈ ಹಿಂದೆ ಸುದ್ದಿಯಾಗಿತ್ತು.
ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಆಕಾಂಕ್ಷಿಗಳು 11,000 ರೂ ಠೇವಣಿ ಇಡುವಂತೆ ಕೇಳಿದ ಕಾಂಗ್ರೆಸ್!