BSY ಪ್ರಮಾಣವಚನ ಹಿನ್ನೆಲೆ : ಬಿಜೆಪಿಯಿಂದ ಸಂಭ್ರಮಾಚರಣೆ, ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದುದರ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯದೆಲ್ಲೆಡೆ ಸಂಭ್ರಮಾಚರಣೆ ನಡೆಸಿದ್ದಾರೆ. ರಾಜ್ಯದ ಹಲವು ಜಿಲ್ಲೆ, ತಾಲೂಕುಗಳ ಬಿಜೆಪಿ ಪಕ್ಷದ ಕಚೇರಿ ಎದುರು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಎಸ್ ಯಡಿಯೂರಪ್ಪನವರಿಗೆ ಜೈಕಾರ ಹಾಕಿದ್ದಾರೆ.

ಇನ್ನೊಂದೆಡೆ ‘ಬಿಜೆಪಿ ರಾಜಭವನವನ್ನು ದುರುಪಯೋಗ ಪಡಿಸಿಕೊಂಡಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಒಟ್ಟಾಗಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ದೇವೇಗೌಡ ಮುಂತಾದ ಹಿರಿಯ ನಾಯಕರು ಭಾಗಿಯಾಗಿದ್ದಾರೆ.

ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ರಾಜ್ಯಪಾಲ ವಜೂಭಾಯಿ ವಾಲಾ ಅವರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com