ತುಮಕೂರು : ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ತುಮಕೂರು : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆ ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಸಂಘಟನೆ ಸದಸ್ಯರು ತುಮಕೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿದರು.

ಸಂಘಟನೆಗಳು ಕರೆ ನೀಡಿದ್ದ ಶಾಲಾ ಕಾಲೇಜುಗಳು ಸ್ವಯಂ ಪ್ರೇರಿತ ಬಂದ್ ಗೆ ಕೆಲ ಶಿಕ್ಷಣ ಸಂಸ್ಥೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕೊಟ್ಟ ಭರವಸೆಯನ್ನು ಈಡೇರಿಸದೆ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಸರಕಾರದ ಧೋರಣೆ ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಸ್ ಪಾಸ್ ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಬಹುತೇಕ ರೈತರ ಮಕ್ಕಳಾಗಿದ್ದಾರೆ. ರೈತ ಪರ ಎಂದು ಹೇಳಿಕೊಳ್ಳುವ ಸರಕಾರ ರೈತರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು. ಟೌನ್ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು.

ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಕುರಿತು ಪ್ರಸ್ತುತ ಮೈತ್ರಿ ಸರ್ಕಾರ ಮಾಡುತ್ತಿರುವ ತಾರತಮ್ಯವನ್ನು ಖಂಡಿಸಿ ಎಐಡಿಎಸ್ಓ, ಎಐಡಿವಾಯ್ಓ, ಎಐಎಂಎಸ್ಎಸ್ ಹಾಗೂ ಆಲ್ ಇಂಡಿಯಾ ಮಹಿಳಾ ಸಂಸ್ಕೃತಿಕ ಸಂಘಟನೆ ವತಿಯಿಂದ ಇಂದು ನಗರದ ಮಿನಿವಿಧಾನಸೌದದ ಎದುರು ಪ್ರತಿಭಟನೆ ನಡೆಸಿದರು.

ಸತತ ನಾಲ್ಕು ವರ್ಷಗಳಿಂದ ಬರಗಾಲ, ಬೆಲೆ ಏರಿಕೆ ನೋಟ ರದ್ದತಿಯಿಂದಾಗಿ ಗ್ರಾಮೀಣ ಹಾಗೂ ಬಡ ಜನತೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಅಲ್ಲದೇ ಸಾವಿರಾರೂ ರೂಪಾಯಿ ಹಣ ಕೊಟ್ಟು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಕೊಡಿಸಲು ಪೋಷಕರಿಗೆ ಕಷ್ಟವಾಗುತ್ತಿದೆ. ಹಿಂದಿನ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ ಘೋಷಣೆ ಮಾಡಿರುವುದನ್ನು ಪ್ರಸ್ತುತ ಮೈತ್ರಿ ಸರ್ಕಾರ ಕಡೆಗಣಿಸಿರುವುದು ಸರಿಯಲ್ಲ. ಮತ್ತೊಂದೆಡೆ ಉಚಿತ ಬಸ್ ಪಾಸ್ ವಿತರಣೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಆಶ್ವಾಸನೆ ನೀಡುತ್ತಿದ್ದಾರೆ. ರೈತಪರ ಸರ್ಕಾರ ಎಂದು ಹೇಳುವ ಸರ್ಕಾರ ರೈತ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ. ಉಚಿತ ಬಸ್ ಪಾಸ್ ಜಾರಿಗೊಳಿಸಲು ಸಾರಿಗೆ ಇಲಾಖೆ ಹಾಗೂ ರಾಜ್ಯ ಸರ್ಕಾರವು ಆರ್ಥಿಕ ಹೊರೆಯಾಗುತ್ತದೆ ಎಂದು ಸುಳ್ಳು ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published.