ಕಾಂಗ್ರೆಸ್‍ ಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೂ ಕಗ್ಗಂಟು!

ಬೆಳಗಾವಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯೂ ಕಾಂಗ್ರೆಸ್‍ಗೆ ಕಗ್ಗಂಟಾಗಿದೆ.ಒಮ್ಮತದ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಬೆಳಗಾವಿ ಜಿಲ್ಲಾ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದು,ಲಕ್ಷ್ಮಿಹೆಬ್ಬಾಳ್ಕರ್ ಅವರಿಗೂ ಹೈಕಮಾಂಡ್ ಬುಲಾವ್ ನೀಡಿದೆ.

ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಇತರ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರನ್ನು ಸೋಲಿಸಿ ಬಿಜೆಪಿ ಗೆಲುವಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯ ಹುಡುಕಾಟ ನಡೆಸಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಅವರು ತಮ್ಮ ಸಹೋದರ ಚನ್ನರಾಜ್ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಮೇಲೆ ಒತ್ತಡ ಏರುತ್ತಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಲಕ್ಷ್ಮೀಹೆಬ್ಬಾಳ್ಕರ್ ವಿರುದ್ಧ ಹಲ್ಲುಮಸೆಯುತ್ತಿರುವ ಜಾರಕಿಹೊಳಿ ಕುಟುಂಬ ಚನ್ನರಾಜ್ ಅವರನ್ನು ಅಭ್ಯರ್ಥಿ ಮಾಡಲು ವಿರೋಧ ವ್ಯಕ್ತಪಡಿಸಿದೆ.
ಇಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ಬೆಳಗಾವಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರ ಜತೆ ಸಮಾಲೋಚನೆ ನಡೆಸಿ ಒಮ್ಮತ ಮೂಡಿಸುವ ಪ್ರಯತ್ನ ನಡೆಸಿದರು.

ಬೆಳಗಾವಿ ಜಿಲ್ಲೆಯಿಂದ ಸ್ಪರ್ಧಿಸಲು ಇನ್ನೊಬ್ಬ ಶಾಸಕಿ ಅಂಜಲಿ ನಿಂಬಾಳ್ಕರ್, ವಿವೇಕ್‍ರಾವ್ ಪಾಟೀಲ್, ನಾಗರಾಜ್ ಯಾದವ್, ಚನ್ನರಾಜ್ ಹೆಬ್ಬಾಳ್ಕರ್ ಮತ್ತಿತರರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಮತ್ತೊಂದು ಕ್ಷೇತ್ರವಾಗಿರುವ ಚಿಕ್ಕೋಡಿಗೆ ಪ್ರಕಾಶ್ ಹುಕ್ಕೇರಿ ಹಾಲಿ ಸಂಸರಾಗಿದ್ದು, ಈಗಲೂ ಅವರನ್ನೇ ಕಣಕ್ಕಿಳಿಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com