ದೇಶದಲ್ಲಿ ಮುಂದುವರೆದ ಕೊರೊನಾ ಹಾವಳಿ : 2.17 ಲಕ್ಷ ಹೊಸ ಕೇಸ್!

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಜನರ ನಿದ್ದೆಗೆಡಿಸಿದೆ. ಕಳೆದ 24 ಗಂಟೆಯಲ್ಲಿ 2.17 ಲಕ್ಷ ಜನರಿಗೆ ಕೊರೊನಾ ಸೋಂಕು ತಗುಲಿದ್ದು, 1,185 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ.

ಹೌದು… ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನಕಳೆದಂತೆ ಆತಂಕ ಹೆಚ್ಚಿಸುತ್ತಿದೆ. ಒಂದೇ ದಿನದಲ್ಲಿ 2,17,353 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಸಚಿವಾಲಯ ಮಾಹಿತಿ ನೀಡಿದೆ. ಈವರೆಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 1,185 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,74,308ಕ್ಕೆ ತಲುಪಿದೆ. ಈ ನಡುವೆ ಸಕ್ರಿಯ ಪ್ರಕರಣಗಳ ಸಂಖ್ಯೆ ದಾಖಲೆಯ 15,69,743ಕ್ಕೆ ತಲುಪಿದೆ.

ಜೊತೆಗೆ ಕಳೆದ 24 ಗಂಟೆಯಲ್ಲಿ 1,18,302 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 1,25,47,866 ಜನ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೆ ಹೆಚ್ಚೆಚ್ಚು ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಒಂದೇ ದಿನ 14,73,210 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 26,34,76,625 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಭಾರತದಲ್ಲಿ ಜನವರಿ 16 ರಂದು ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 11,72,23,509 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights